ದಿಢೀರನೇ ದೆಹಲಿಗೆ ದೌಡಾಯಿಸಿದ ಬಿ. ಎಸ್‌ ವೈ ಪುತ್ರ ಬಿ.ವೈ. ವಿಜಯೇಂದ್ರ

ನವದೆಹಲಿ, ಜೂ. 1: ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಿಸಿ ಇನ್ನೂ ಕಡಿಮೆಯಾಗಿಲ್ಲ. ಸಿಎಂ ಯಡಿಯೂರಪ್ಪನವರನ್ನು ಕೆಳಗಿಳಿಸಿ ಬೇರೊಬ್ಬರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕೆಂದು ಬಿಜೆಪಿಯ ಕೆಲವು ಶಾಸಕರು ಸಹಿಯನ್ನು ಕೂಡ ಸಂಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದ ಸಚಿವ ಸಿ.ಪಿ. ಯೋಗೇಶ್ವರ್ ನೇತೃತ್ವದ ತಂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಸಾಧ್ಯವಾಗದೆ ವಾಪಾಸ್ ಬಂದಿತ್ತು. ಇದೀಗ ತಮ್ಮ ವಿರೋಧ ಬಣಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ದಿಢೀರನೆ ತಮ್ಮ ಮಗ ಬಿ.ವೈ. ವಿಜಯೇಂದ್ರ ಅವರನ್ನು ದೆಹಲಿಗೆ ಕಳುಹಿಸಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಮಾತನಾಡಲು ಮಗ ವಿಜಯೇಂದ್ರರನ್ನು ಕಳುಹಿಸಿರುವ ಸಿಎಂ ಯಡಿಯೂರಪ್ಪ ತಮ್ಮ ವಿರೋಧಿ ಪಾಳಯಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗಾಗಿ ದೆಹಲಿಗೆ ಆಗಮಿಸಿದ ಬಿ.ವೈ. ವಿಜಯೇಂದ್ರ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ದೂರು ನೀಡುವ ಸಾಧ್ಯತೆಯಿದೆ. ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ಸಚಿವ ಸಿಪಿವೈ ವಿರುದ್ಧ ದೂರು ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಸಿ.ಪಿ‌. ಯೋಗೇಶ್ವರ್ ಅನಾವಶ್ಯಕವಾಗಿ ಬಿಜೆಪಿ ಶಾಸಕರಲ್ಲಿ ಮತ್ತು ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಚಿವರಾಗಿದ್ದುಕೊಂಡು ಸರ್ಕಾರದ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ಇತ್ತೀಚೆಗೆ ರಾಜ್ಯದಲ್ಲಿರುವುದು ಮೂರು ಪಕ್ಷಗಳ ಸರ್ಕಾರ ಎಂದಿದ್ದ ಸಚಿವ ಯೋಗೇಶ್ವರ್ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಕೊರೋನಾ ಸಮಯದಲ್ಲಿ ಸಚಿವ ಯೋಗೇಶ್ವರ್ ರಾಜಕೀಯ ಪ್ರಸ್ತಾಪ ಮಾಡುತ್ತಿದ್ದಾರೆ. ಪ್ರಸಕ್ತ ರಾಜಕೀಯ ಬೆಳವಣಿಗೆಯಿಂದ ಪಕ್ಷ-ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ. ಯೋಗೇಶ್ವರ್ ರಾಜೀನಾಮೆಗೆ ಹಲವು ಶಾಸಕರು ಒತ್ತಾಯಿಸುತ್ತಿದ್ದಾರೆ. ಸೋತವರನ್ನು ಸಚಿವರನ್ನಾಗಿ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತವಾಗುತ್ತಿದೆ. ಸಚಿವ ಸಿ.ಪಿ. ಯೋಗೇಶ್ವರ್ ಗೆ ಖಡಕ್ ಸೂಚನೆ ನೀಡಿ ಅಥವಾ ಯೋಗೇಶ್ವರ್ ಅವರನ್ನು ಸಂಪುಟದಿಂದ ಕೈಬಿಡಲು ಅನುಮತಿ ನೀಡಿ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಮನವಿ ಸಲ್ಲಿಸುವ ಸಾಧ್ಯತೆಯಿದೆ. ಇನ್ನು, ತಮ್ಮನ್ನು ಭೇಟಿಯಾಗಲು ಸಿಎಂ ಯಡಿಯೂರಪ್ಪನವರ ಮಗ ಬಿ.ವೈ. ವಿಜಯೇಂದ್ರ ದೆಹಲಿಗೆ ಆಗಮಿಸಿರುವ ಬಗ್ಗೆ ತಮಗೇನೂ ತಿಳಿದಿಲ್ಲ ಎಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಬಿ.ವೈ. ವಿಜಯೇಂದ್ರ ದೆಹಲಿ ಬಂದಿರುವುದು ಗೊತ್ತಿಲ್ಲ. ಸಚಿವ ಸಿ.ಪಿ. ಯೋಗಿಶ್ವರ್ ಸಿಎಂ ವಿರುದ್ದ ಮಾತಾಡಿರುವ ವಿಚಾರವೂ ಗೊತ್ತಿಲ್ಲ ಎಂದು ಅವರು ಪತ್ರಕರ್ತರ ಪ್ರಶ್ನೆಗಳಿಗೆ ಜಾರಿಕೊಳ್ಳುವ ಉತ್ತರ ನೀಡಿದ್ದಾರೆ.

ಕರ್ನಾಟಕದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆಯಿಲ್ಲ. ವಿನಾಕಾರಣ ಯಾರೂ ಆ ಬಗ್ಗೆ ಹೇಳಿಕೆ ನೀಡಬಾರದು ಎಂದು ಹೈಕಮಾಂಡ್ ಈಗಾಗಲೇ ಸೂಚನೆ ನೀಡಿದೆ. ಹೀಗಿದ್ದರೂ ಸಚಿವ ಸಿ.ಪಿ. ಯೋಗೇಶ್ವರ್ ಕರ್ನಾಟಕದಲ್ಲಿ ಬಿಜೆಪಿಯ ವರ್ತನೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ನನ್ನ ಇಲಾಖೆಯಲ್ಲಿ ಬೇರೊಬ್ಬರ ಹಸ್ತಕ್ಷೇಪವನ್ನು ನಾನು ಸಹಿಸುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಬಿಜೆಪಿಯಾಗಿ ಉಳಿದಿಲ್ಲ. ಜೆಡಿಎಸ್ ಜೊತೆ ಬಿಜೆಪಿಗೆ ಹೊಂದಾಣಿಕೆಯಿದೆ ಎಂದು ಸ್ವಪಕ್ಷದವರ ವಿರುದ್ಧವೇ ಸಿ.ಪಿ. ಯೋಗೇಶ್ವರ್ ಹರಿಹಾಯ್ದಿದ್ದರು.ನನ್ನ ಅಧಿಕಾರದಲ್ಲಿ ನನ್ನ ಮಗ ಮೂಗು ತೂರಿಸುವುದು ಸರಿಯಲ್ಲ. ಆದರೆ, ಕರ್ನಾಟಕದಲ್ಲಿ ಇದೇ‌ ನಡೆಯುತ್ತಿದೆ ಎನ್ನುವ ಮೂಲಕ ಸರ್ಕಾರದ ಆಡಳಿತದಲ್ಲಿ ಸಿಎಂ ಯಡಿಯೂರಪ್ಪನವರ ಮಗ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪ ಮಾಡುವ ಬಗ್ಗೆ ಪರೋಕ್ಷವಾಗಿ ಸಿ.ಪಿ. ಯೋಗೇಶ್ವರ್ ಆಕ್ಷೇಪ ವ್ಯಕ್ತಪಡಿಸಿದ್ದರು. ನಮ್ಮ ಪಕ್ಷದ ಕೆಲವು ಸ್ನೇಹಿತರು ನನ್ನ ಬಗ್ಗೆ ಮಾತನಾಡುತ್ತಿರುವುದು ಗೊತ್ತು. ಅದನ್ನು ಮಾತನಾಡಿಸುತ್ತಿರುವುದು ಯಾರೆಂಬ ಬಗ್ಗೆಯೂ ಗೊತ್ತು. ಇದು ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. ಮೂರು ಗುಂಪಿನ ಸರ್ಕಾರ ಆಗಿದೆ. ಮೂರು ರಾಜಕೀಯ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿವೆ. ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಜತೆ ಬಿಜೆಪಿ ಸರ್ಕಾರ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಸಿ.ಪಿ. ಯೋಗೇಶ್ವರ್ ಬಾಂಬ್ ಸಿಡಿಸಿದ್ದರು.

ಕರ್ನಾಟಕದಲ್ಲಿ ಈಗ ಕೋವಿಡ್ ಕೆಲಸ ಮಾತ್ರ ನಡೆಯುತ್ತಿದೆ. ಬೇರೆ ಯಾವುದೇ ಚಟುವಟಿಕೆಗಳಿಗೆ ಅವಕಾಶ ಇಲ್ಲ. ಶಾಸಕರಿಗೆ ಈ ಹಿಂದೆಯೇ ಸೂಚಿಸಿದ್ದೆ, ಈಗಲೂ ಅದೇ ಸೂಚನೆ ಕೊಡುತ್ತಿದ್ದೇನೆ. ಈಗ ಕೋವಿಡ್ ಕೆಲಸ ಮಾಡಬೇಕು, ಬೇರೆ ರಾಜಕೀಯ ಚಟುವಟಿಕೆ ಮಾಡಬಾರದು ಎಂದು ಭಿನ್ನಮತೀಯ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್​ ಕೂಡ ಎಚ್ಚರಿಕೆ ನೀಡಿದ್ದರು.

Exit mobile version