ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: 7 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್

ಬೆಂಗಳೂರು, ಆ. 09: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಸೋಮವಾರ ಕೆಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೇ ದಾವಣಗೆರೆ, ರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಹಗುರ ಮಳೆಯಾಗಲಿದೆ.

ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.6 ಮೀಟರ್ ಎತ್ತರದ ಅಲೆಗಳು ಏಳುವ ಮನ್ಸೂಚನೆ ಇದೆ. ಹೀಗಾಗಿ ಮೀನುಗಾರರು ಆ.11ರವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Exit mobile version