ಜೂನ್ 06ರಂದು ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು, ಜೂ. 06: ನೈರುತ್ಯ ಮುಂಗಾರು ಕರ್ನಾಟಕವನ್ನು ಪ್ರವೇಶಿಸಿದೆ. ಆದ ಕಾರಣ ಇಂದಿನಿಂದ ಮಳೆ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಧಿಕ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರವಾಗಿರುವುದರಿಂದ ಇನ್ನೂ 2 ದಿನಗಳ ಕಾಲ ಮಳೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 3ರಂದು ಕೇರಳಕ್ಕೆ ಮುಂಗಾರಿನ ಪ್ರವೇಶವಾಗಿರುವ ಕಾರಣ ಕರ್ನಾಟಕದ ಕರಾವಳಿ ತೀರದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಅಂತೆಯೇ ಜೂನ್ 6ರವರೆಗೆ ಕರ್ನಾಟಕದ ವಿವಿಧೆಡೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಕೇರಳ, ಅಸ್ಸಾಂ, ಮೇಘಾಲಯ, ಮಿಜೋರಾಂ, ತೆಲಂಗಾಣ, ರಾಯಲಸೀಮೆ, ಗೋವಾ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶ ಸೇರಿದಂತೆ ಇನ್ನೂ ಕೆಲವೆಡೆ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಆರಂಭವಾದ ನಂತರ ಅದರ ಪರಿಣಾಮದ ಬಗ್ಗೆ ಒಂದು ಅಂದಾಜು ಸಿಗುತ್ತದೆ. ಅದರಂತೆ ಈ ಬಾರಿ ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Exit mobile version