ಹೊಸದಿಲ್ಲಿ, ಮಾ. 06: ದೇಶದಲ್ಲಿ ಕಳೆದ ಕೆಲ ದಿನಗಳಿಂದ ಸ್ವಲ್ಪಮಟ್ಟಿಗೆ ಕಡಿಮೆಯಾಗಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ಪರಿಣಾಮ ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಆತಂಕ ಶುರುವಾಗಿದೆ.
ದೇಶದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ ಹೊಸದಾಗಿ 18,327 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 14,234 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 108 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇದರಿಂದಾಗಿ ದೇಶದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 1,11,92,088 ಆಗಿದ್ದರೆ. 1,08,54,128 ಮಂದಿ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿಗೆ ಈವರೆಗೆ 1,57,656 ಜನ ಬಲಿಯಾಗಿದ್ದು, ದೇಶದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 1,80,304 ಆಗಿದೆ. ಈ ನಡುವೆ ದೇಶದಲ್ಲಿ ಇದುವರೆಗೂ 1,94,97,704 ಜನರಿಗೆ ಕೊರೊನಾ ಲಸಿಕೆ ಹಾಕಲಾಗಿದೆ.
ದೇಶದಲ್ಲಿ ಪ್ರಮುಖವಾಗಿ ಮಹಾರಾಷ್ಟ್ರ, ಕೇರಳ, ಪಂಜಾಬ್, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಪ್ರತಿದಿನ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಶೇ.82 ರಷ್ಟು ಏರಿಕೆಯಾಗಿದ್ದು, ಮಹಾರಾಷ್ಟ್ರದಲ್ಲಿ 10,216, ಕೇರಳದಲ್ಲಿ 2,776 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.