ಇಂಗ್ಲೆಂಡ್ ವಿರುದ್ಧದ ಅಂತಿಮ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ಪ್ರಕಟ: ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಂ ಇಂಡಿಯಾ, ಸರಣಿಯ ಉಳಿದ 2 ಟೆಸ್ಟ್ ಪಂದ್ಯಗಳಿಗೆ ಪ್ರಮುಖ ಬದಲಾವಣೆ ಮಾಡಿಕೊಂಡಿದೆ.

ಆಂಗ್ಲರ ವಿರುದ್ಧದ ನಾಲ್ಕು ಪಂದ್ಯಗಳ ಸರಣಿಯ ಕೊನೆಯ 2 ಪಂದ್ಯಗಳು ಅಹಮ್ಮದಾಬಾದ್​ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉಳಿದ 2 ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿರುವ ಬಿಸಿಸಿಐ, ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಪ್ರಮುಖವಾಗಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಶಾರ್ದೂಲ್ ಠಾಕೂರ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಇವರ ಸ್ಥಾನಕ್ಕೆ ಉಮೇಶ್ ಯಾದವ್ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ಬಿಸಿಸಿಐ ನಿರ್ಧರಿಸಿದ್ದು, ನಾಳೆ(ಫೆ.18)ರಂದು ನಡೆಯುವ ಫಿಟ್ನೆಸ್ ಪರೀಕ್ಷೆಯ ವರದಿ ಬಳಿಕ ಉಮೇಶ್ ಯಾದವ್ ಸೇರ್ಪಡೆ ಖಚಿತಗೊಳ್ಳಲಿದೆ.

ಉಳಿದಂತೆ ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯಾ ರಹಾನೆ(ಉಪ-ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಶುಭ್ಮನ್ ಗಿಲ್, ಚೇತೇಶ್ವರ್ ಪೂಜಾರ, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ವೃದ್ಧಿಮಾನ್ ಸಾಹ, ಆರ್. ಅಶ್ವಿನ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್(ಫಿಟ್ನೆಸ್ ಪರೀಕ್ಷೆ ಬಳಿಕ) ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

Exit mobile version