Bengaluru: ಗೋಬಿ ಮಂಚೂರಿ, ಕಬಾಬ್‌ಗಳಲ್ಲಿ ಬಳಸುತ್ತಿರುವ ಕೃತಕ ಬಣ್ಣವನ್ನು ಬ್ಯಾನ್ ಮಾಡಲು ಕರ್ನಾಟಕ ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ. ಇದು ಚಿಕನ್, ಫಿಶ್, ಮಟನ್ (Chicken, Fish, Mutton) ನಂತಹ ನಾನ್‌ವೆಜ್ ಹಾಗೂ ವೆಜ್‌ನಲ್ಲಿ ಮಾಡುವ ಎಲ್ಲಾ ಕಬಾಬ್‌ಗೂ ಅನ್ವಯವಾಗಲಿದೆ. ಈಗಾಗಲೇ ರಾಜ್ಯದಲ್ಲಿ ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸದಂತೆ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿತ್ತು. ಸದ್ಯ ಮುಂದುವರೆದು ಕಬಾಬ್‌ನಲ್ಲಿ ಬಳಸುವ ಕೆಂಪು ಹಾಗೂ ಹಸಿರು ಬಣ್ಣದ ಫುಡ್ ಕಲರ್ (Food Colour)ಗಳಿಗೂ ನಿಷೇಧ ವಿಧಿಸಲಾಗಿದೆ.

ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ (Kabab)ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿತ್ತು.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿತ್ತು . ಈ ಮಾದರಿಗಳಲ್ಲಿ 8 ಕಬಾಬ್‌ನ ಮಾದರಿಗಳು ಅಪಾಯಕಾರಿ ರಾಸಾಯನಿಕದ ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

2011 ರ ಅನ್ವಯ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.ಆಹಾರ ಸುರಕ್ಷತೆ ವಿಚಾರದಲ್ಲಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao)ಸೂಚನೆ ನೀಡಿದ್ದಾರೆ.