ಕಾಶ್ಮೀರ, ಜೂ. 12: ಉತ್ತರ ಕಾಶ್ಮೀರದ ಸೋಪೋರ್ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಸೋಪೋರ್ನ ಮುಖ್ಯ ಚೌಕ್ ಬಳಿ ಈ ಉಗ್ರ ದಾಳಿ ನಡೆದಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಸದ್ಯ ಉಗ್ರರನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಕಾಶ್ಮೀರದ ಮಾಜಿ ಸಿಎಂ, ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಓಮರ್ ಅಬ್ದುಲ್ಲಾ, ಈ ಉಗ್ರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ ಹಾಗೂ ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ, ಮೃತರ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.