ಖಾಸಗಿ ಶಿಕ್ಷಣ ಸಂಸ್ಥೆಗಳ ನಿರ್ಧಾರ ಅಮಾನವೀಯ: ಸಿದ್ದರಾಮಯ್ಯ

ಬೆಂಗಳೂರು, ನ. 25: ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಶಿಕ್ಷಣ ಕೈಬಿಡಲು ಹೊರಟಿರುವುದು ಅಮಾನವೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾದಿಂದ ಜನರು ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲದಂತಾಗಿದೆ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ ಅಲ್ಲದೆ ಬೇರೇನಲ್ಲ ಎಂದು ಟೀಕಿಸಿದ್ದಾರೆ.

Exit mobile version