ಬೆಂಗಳೂರು, ಜು. 28: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಶುಭ ಕೋರುವ ಜೊತೆಗೆ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ತಮ್ಮದೇ ಸಲಹೆಗಳನ್ನು ನೀಡಿದ್ದಾರೆ.
ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಟ್ವೀಟ್ ಮೂಲಕ ಶುಭ ಕೋರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪ್ರಸ್ತುತ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ ಎಂದಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಹ ಬಸವರಾಜ ಬೊಮ್ಮಾಯಿ ಅವರಿಗೆ ತಮ್ಮ ಅಭಿನಂದನೆ ಸಲ್ಲಿಸಿದ್ದು, ಸಿಕ್ಕ ಈ ಅವಕಾಶದಲ್ಲಿ ನಾಡಿನ ಜನತೆಗೆ ಉತ್ತಮ ಆಡಳಿತ ನೀಡುವ ಆಶಯ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕರಿಂದ ಶುಭಾಶಯ ರಾಜ್ಯದ ಹೊಸ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದ ಕಾಂಗ್ರೆಸ್ ನಾಯಕರು ಸಹ ಶುಭಾಶಯ ಕೋರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸ್ವಚ್ಛ ಹಾಗೂ ಪ್ರಮಾಣಿಕ ಆಡಳಿತವನ್ನು ಎದುರು ನೋಡುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಇನ್ನೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶುಭಾಶಯ ಸಲ್ಲಿಸಿದ್ದು, ಆಡಳಿತದ ಮೇಲೆ ಮರಳಿ ಗಮನ ಹರಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಭರವಸೆ ಇರಿಸಿದೆ ಎಂದಿದ್ದಾರೆ. ಉಳಿದಂತೆ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಎಂ.ಬಿ.ಪಾಟೀಲ್ ಸೇರಿ ಹಲವರು ಪಕ್ಷಾತೀತವಾಗಿ ಹೊಸ ಸಿಎಂಗೆ ಶುಭಾಶಯ ತಿಳಿಸಿದ್ದಾರೆ.