ಲಾಕ್ ಡೌನ್ ಹಿನ್ನೆಲೆ: ಬಡವರು ಹಾಗೂ ದುಡಿಯುವ ವರ್ಗದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿದ್ದರಾಮಯ್ಯ

ಬೆಂಗಳೂರು, ಮೇ. 11: ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡವರು ಹಾಗೂ ದುಡಿಯುವ ವರ್ಗದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಆಂದ್ರಪ್ರದೇಶ, ಕೇರಳದಲ್ಲಿ ವಿಶೇಷ ನೆರವಿನ ಪ್ಯಾಕೇಜ್ ನೀಡಿದ್ದಾರೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ.

ಸೋಂಕು ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ, ಆಗ ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಇದು ಸರ್ಕಾರವೇ ಜನರನ್ನು ಸಾವಿನ ದವಡೆಗೆ ತಳ್ಳಿದಂತೆ. ನಿತ್ಯ 50,000 ಪಾಸಿಟಿವ್ ಕೇಸ್ ಗಳು ದಾಖಲಾಗ್ತಿವೆ. ಹೀಗಾಗಿ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಜನರಿಗೆ ಆರ್ಥಿಕ ನೆರವು ಮತ್ತು ಅಗತ್ಯ ದಿನಸಿ ವಸ್ತುಗಳನ್ನು ಸರ್ಕಾರ ಕೂಡಲೇ ನೀಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ.

ಹೈಕೋರ್ಟ್, ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಈ ವರೆಗೆ ನಮ್ಮ ರಾಜ್ಯಕ್ಕೆ ಅಗತ್ಯ ಪ್ರಮಾಣದ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಟೀಕಿಸಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾದ ಬಳಿಕ ಕೋರ್ಟ್ ಮಧ್ಯೆ ಪ್ರವೇಶಿಸಿದೆ, ಅಂದರೆ ದೇಶದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ ಎಂದರ್ಥ. ಈ ವರೆಗೆ ಸಂಭವಿಸಿರುವ ಸಾವು, ನೋವುಗಳಿಗೆ ಬಿಜೆಪಿ ಪಕ್ಷವೇ ನೇರಹೊಣೆ. ನಾನು ನಮ್ಮ ಶಾಸಕರೊಂದಿಗೆ ಮಾತನಾಡಿದ್ದೇನೆ. ಕೆಲವರು ವೈದ್ಯಕೀಯ ನೆರವು ನೀಡುತ್ತಿದ್ದಾರೆ, ಇನ್ನು ಕೆಲವರು ಆಹಾರ ಧಾನ್ಯ, ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ನಮ್ಮ ಸಹಕಾರ ಸದಾ ಇರುತ್ತೆ. ಆದರೆ ಆಸ್ಪತ್ರೆ, ಅಂಬುಲೆನ್ಸ್, ಆಕ್ಸಿಜನ್ ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದಿದ್ದಾರೆ.

https://twitter.com/siddaramaiah/status/1391669954936655873?s=08
Exit mobile version