Paris: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮನು ಭಾಕರ್ (Manu Bhakar) ಹಾಗೂ ಸರಬ್ಜೋತ್ ಸಿಂಗ್ ಜೋಡಿ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.

ಇದರೊಂದಿಗೆ ಭಾರತ ಈ ಕೂಟದಲ್ಲಿ ಎರಡನೇ ಕಂಚಿನ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೊದಲು ಮಹಿಳೆಯರ 10 ಮೀ ಏರ್ ಪಿಸ್ತೂಲ್ (Air Pistol) ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ್ದ ಮನು ಭಾಕರ್, ಇದೀಗ ಮಿಶ್ರ ತಂಡ ವಿಭಾಗದಲ್ಲೂ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮೂಲಕ ಒಲಿಂಪಿಕ್ಸ್ (Olympic) ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎನ್ನುವ ಹಿರಿಮೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಮೊದಲ ಸುತ್ತಿನಲ್ಲಿ ಕೊರಿಯಾ ಜೋಡಿ 2-0 ಮುನ್ನಡೆ ಸಾಧಿಸಿತು. ಇದಾದ ಬಳಿಕ ಸತತ 4 ಸುತ್ತುಗಳಲ್ಲಿ ಭಾರತದ ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ (Sarabjot Singh) ಜೋಡಿ ಮುನ್ನಡೆ ಸಾಧಿಸುವ ಮೂಲಕ 8-2 ಮುನ್ನಡೆಗಳಿಸಿತು.

ಮನು ಭಾಕರ್ ಮಹಿಳಾ ಸಿಂಗಲ್ಸ್ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಅಲಂಕರಿಸುವ ಮೂಲಕ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಪದಕದ ಖಾತೆ ತೆರೆದಿದ್ದರು.
ಆ ಬಳಿಕ ಮತ್ತೆ ಕೊರಿಯಾ ಜೋಡಿ ಕಮ್‌ಬ್ಯಾಕ್ ಮಾಡುವ ಪ್ರಯತ್ನ ನಡೆಸಿತಾದರೂ, ಭಾರತದ ಜೋಡಿ ಮುನ್ನಡೆಯನ್ನು ಕಾಯ್ದುಕೊಳ್ಳುತ್ತಲೇ ಸಾಗುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡುವಲ್ಲಿ ಯಶಸ್ವಿಯಾಗಿತ್ತು. ಅಂತಿಮವಾಗಿ ಭಾರತದ ಜೋಡಿ 16-10 ಅಂಕಗಳ ಅಂತರದಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿತು.
22 ವರ್ಷದ ಮನು ಭಾಕರ್ 2023ರ ವಿಶ್ವ ಚಾಂಪಿಯನ್ಶಿಪ್ (World Championship)ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಇದಕ್ಕೂ ಮುನ್ನ ಏಷ್ಯನ್ ಗೇಮ್ಸ್ 2022 ರಲ್ಲೂ 25 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅಲ್ಲದೆ ಏಷ್ಯನ್ ಶೂಟಿಂಗ್ ಚಾಂಪಿಯನ್ಶಿಪ್ನ 25 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಮೂಲಕವೇ ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆಗಿಟ್ಟಿಸಿಕೊಂಡಿದ್ದರು.