ಬೆಳಗಾವಿಯಲ್ಲಿ ದುಷ್ಕರ್ಮಿಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ 144 ಸೆಕ್ಷನ್‌ ಜಾರಿ

ಬೆಳಗಾವಿ ಡಿ 17 : ಬೆಳ್ಳಂಬೆಳಗ್ಗೆ ಬೆಳಗಾವಿಯಲ್ಲಿ ಎಂಇಎಸ್‌ ಪುಂಡರ ಅಟ್ಟಹಾಸ ಮುಂದುವರೆದಿದೆ. ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಇಂದು ನಸುಕಿನ ಜಾವ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿರೂಪಗೊಳಿಸಿರುವ ಘಟನೆ ನಡೆದಿದೆ. ಜನಸಂಚಾರವಿರದ ಹೊತ್ತಿನಲ್ಲಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ವಿರೂಪಗೊಳಿಸಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾನಿಗೊಳಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟು ವಿಕೃತಿ ಮೆರೆದಿದ್ದಾರೆ.

ನಂತರ ಸ್ಥಳದಲ್ಲಿ ತೀವ್ರ ಗಲಾಟೆ, ಗದ್ದಲ ನಡೆದಿದೆ. ಕರ್ನಾಟಕ ಸರ್ಕಾರದ, ಪೊಲೀಸ್ ಇಲಾಖೆಯ ವಾಹನಗಳನ್ನು ಗುರಿಯಾಗಿಟ್ಟುಕೊಂಡು ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. ದುರ್ಘಟನೆಯಲ್ಲಿ ಅನೇಕ ಕಾರುಗಳು ಪುಡಿಯಾಗಿವೆ. ಈ ಘಟನೆಯ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಳಗಾವಿಯ ಮೂರು ವಿವಿಧ ಪೊಲೀಸ್ ಠಾಣೆಗಳಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಘಟನೆಗೆ ಸಂಬಂಧಿಸಿ 27 ಮಂದಿಯನ್ನು ಬಂಧಿಸಲಾಗಿದೆ. ಸರ್ಕಾರದ ಮತ್ತು ಬೆಳಗಾವಿಯ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಸುಮಾರು 26 ವಾಹನಗಳನ್ನು ಪುಂಡರು ಧ್ವಂಸಗೊಳಿಸಿದ್ದರು ಎಂದು ಬೆಳಗಾವಿ ಪೊಲೀಸ್ ಆಯುಕ್ತ ಡಾ ಕೆ ತ್ಯಾಗರಾಜನ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಕೆಲ ಪುಂಡರು ಇಂದು ನಸುಕಿನ ಜಾವ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಭಗ್ನಗೊಳಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 27 ಮಂದಿಯನ್ನು ಬಂಧಿಸಲಾಗಿದೆ.

 ಘಟನೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿರುವುದರಿಂದ ಇಂದು ಬೆಳಗ್ಗೆ 8 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆಯವರೆಗೂ ಬೆಳಗಾವಿ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ಸಹ ಆಯುಕ್ತರು ತಿಳಿಸಿದ್ದಾರೆ

Exit mobile version