ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಆದೇಶ

Bengaluru: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಶಿಕ್ಷಣ ಸಂಸ್ಥೆಗಳ ವಿಚಾರದಲ್ಲಿ ಹಲವು ತರಾತುರಿಯ ನಿರ್ಧಾರಗಳನ್ನು ತೆಗೆದುಕೊಂಡು ವಿವಾದಕ್ಕೆ ಸಿಲುಕುತ್ತಿರುವ ಇದೀಗ ಮತ್ತೆ ಎಡವಟ್ಟು ಮಾಡಿಕೊಂಡಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ಇತ್ತೀಚೆಗೆ ಸರ್ಕಾರ ಹೊರಡಿಸಿದ್ದು, ವಿವಾದಕ್ಕೆ ಗ್ರಾಸವಾಗುವ ಸಾಧ್ಯತೆ ಇದೆ.

ಧಾರ್ಮಿಕ ಹಬ್ಬಗಳ ವಸತಿ ಶಾಲೆಗಳಲ್ಲಿ ಆಚರಣೆಗೆ ನಿರ್ಬಂಧ ಹೇರಿ ಆಮೇಲೆ ಹಿಂಪಡೆದಿದ್ದ ಮತ್ತು ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನು ತೆಗೆಸಿ ಆಮೇಲೆ ಯೂಟರ್ನ್ ತೆಗೆದುಕೊಂಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಅಂಥದ್ದೇ ಕ್ರಮಕ್ಕೆ ಮುಂದಾಗಿದೆ. ರಾಷ್ಟ್ರ ಕವಿ, ಜ್ಞಾನಪೀಠ ಪುರಸ್ಕೃತ ಡಾ. ಕುವೆಂಪುರವರ (Kuvempu) ‘ಜಯ ಭಾರತ ಜನನಿಯ ತನುಜಾತೆ’ ಕವನವನ್ನು ‘ನಾಡಗೀತೆ’ಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಹಾಗೂ ಅದಕ್ಕೆ ಫೆಬ್ರವರಿ (February) 1 ರಂದು ಮಾಡಲಾದ ತಿದ್ದುಪಡಿ ಪ್ರಕಾರ,

ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು’ ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಮೇಲಿನ ಸುತ್ತೋಲೆಯಲ್ಲಿ ‘ಎಲ್ಲಾ ಶಾಲೆಗಳಲ್ಲಿ ಕಾರ್ಯಕ್ರಮದ ಆರಂಭದಲ್ಲಿ ನಾಡಗೀತೆಯನ್ನು ಹಾಡುವುದು’ ಎಂಬುದರ ಬದಲಾಗಿ, ‘ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳಲ್ಲಿ’ ಎಂದು ಬದಲಾಯಿಸಲಾಗಿದೆ. ಹೀಗಾಗಿ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥ ಬರುತ್ತದೆ. ಹಾಗೆಂದು, ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡಬಾರದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿಲ್ಲ ಎಂಬುದೂ ಗಮನಾರ್ಹ.

Exit mobile version