ದಿಶಾ ರವಿ ಸಂಬಂಧಿಸಿದ ಯಾವುದೇ ಮಾಹಿತಿ ಮಾಧ್ಯಮಗಳಿಗೆ ಸೋರಿಕೆ ಮಾಡಿಲ್ಲ-ದೆಹಲಿ ಪೊಲೀಸ್

ನವದೆಹಲಿ ಫೆ 18ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಟೂಲ್ ಕಿಟ್ ಸಿದ್ದಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದ್ದಾರೆ.

ತನ್ನ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತನಿಖೆಯ ಯಾವುದೇ ಮಾಹಿತಿಯನ್ನು ಪೊಲೀಸರು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ತಡೆಯಿಡಿಯಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದ ದಿಶಾ ರವಿ. ಅರ್ಜಿಯ ವಿಚಾರಣೆ ವೇಳೆ ಪೊಲೀಸರು ಈ ಮಾಹಿತಿ ನೀಡಿದ್ದಾರೆ.

ತನಿಖೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ನ್ಯಾಯಮೂರ್ತಿ ಪ್ರತಿಭಾ ಎನ್ ಸಿಂಗ್, ದೆಹಲಿ ಪೊಲೀಸರ ಪರವಾಗಿ ವಿಚಾರಣೆಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.

ತನ್ನ ಮತ್ತು ಮೂರನೇ ವ್ಯಕ್ತಿಗಳ ನಡುವೆ ನಡೆದ ವಾಟ್ಸಾಪ್ ಸೇರಿದಂತೆ ಯಾವುದೇ ಖಾಸಗಿ ಚಾಟ್‌ಗಳ ವಿಷಯ ಅಥವಾ ಮಾಹಿತಿಯನ್ನು ಮಾಧ್ಯಮಗಳು ಪ್ರಕಟಿಸದಂತೆ ತಡೆಯಬೇಕು ಎಂದು ಸಹ ಅರ್ಜಿಯಲ್ಲಿ ಕೋರಲಾಗಿದೆ. ಈ ಕುರಿತು ಕೋರ್ಟ್ ನಾಳೆ ವಿಚಾರಣೆ ನಡೆಸಲಿದೆ.

ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬುದನ್ನು ವಿವರಿಸುವ ‘ಟೂಲ್‌ಕಿಟ್‌’ ಅನ್ನು ಸಿದ್ಧಪಡಿಸಿ, ಅದನ್ನು ಅಂತಾರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಅವರಿಗೆ ಕಳುಹಿಸಿದ ಆರೋಪದ ಮೇಲೆ ದಿಶಾ ರವಿ ಅವರನ್ನು ಬಂಧಿಸಲಾಗಿದೆ.

Exit mobile version