ಚಾ.ನಗರ ಆಕ್ಸಿಜನ್​ ದುರಂತ: ಸಿಎಂ, ಸಚಿವ ಸುಧಾಕರ್​​ ರಾಜೀನಾಮೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಮೇ. 03: ಗಡಿಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿರುವ ಘಟನೆ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್‌ ನಾಯಕರು ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿರುವ ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಈ ಘಟನೆಯ ನೈತಿಕ ಹೊಣೆ ಹೊತ್ತು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹಾಗೂ ಸಚಿವ ಸುಧಾಕರ್‌ ಕೂಡಲೇ ರಾಜೀನಾಮೆ ಕೊಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್​​​ ಮಾಡಿರುವ ಅವರು, ಸರ್ಕಾರ, ಜಿಲ್ಲಾಸ್ಪತ್ರೆ ವೈದ್ಯರು, ಜಿಲ್ಲಾಡಳಿತರ ವಿರುದ್ಧ ಹರಿಹಾಯ್ದಿದ್ದಾರೆ.

ಚಾಮರಾಜನಗರದ ಘಟನೆಯಿಂದ ಬಹಳ ನೋವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು. ರಾಜ್ಯದಲ್ಲಿ ಆಕ್ಸಿಜನ್​ ಸಿಗದೇ ಉಂಟಾಗಿರುವ ಸರಣಿ ಸಾವುಗಳ ಮುಂದುವರಿದ ಭಾಗವಿದು. ಈ ಸಾವಿಗೆ ಬಿಜೆಪಿ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು, ಜಿಲ್ಲಾಡಳಿತವೇ ನೇರ ಹೊಣೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿರೋದಕ್ಕೆ ಈ ಅಮಾನವೀಯ ಪ್ರಕರಣವೇ ಸಾಕ್ಷಿ. ಅಧಿಕಾರದ ಲಾಲಾಸೆಗೆ ಬಿಜೆಪಿ ಸರ್ಕಾರ ಇನ್ನಷ್ಟು ಜನರನ್ನು ಬಲಿ ಪಡೆಯುವುದು ಬೇಡ. ಜನರ ಜೀವ ರಕ್ಷಿಸಲು ಸಾಧ್ಯವಾಗದ ಇಂಥ ಸರ್ಕಾರ ಇರುವುದಕ್ಕಿಂತ ತೊಲಗುವುದೆ ಲೇಸು ಎಂದು ಕಿಡಿಕಾರಿದ್ದಾರೆ.

ಅಲ್ಲದೇ, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಆರೋಗ್ಯ ಸಚಿವ ಕೆ.ಸುಧಾಕರ್​ ಈ ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡಬೇಕು. ಹೈಕೋರ್ಟ್​​ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿ ಮೂಲಕ ಪ್ರಕರಣದ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

Exit mobile version