ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರಿಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ವಿಚಾರಣಾ ಆಯೋಗ ₹25 ಸಾವಿರ ದಂಡ ವಿಧಿಸಿದೆ.
ಬುಧವಾರ ಈ ಪ್ರಕರಣದ ವಿಚಾರಣೆ ನಿಗದಿಯಾಗಿತ್ತು. ಆದರೆ, ಪರಮ್ಬೀರ್ ಸಿಂಗ್ ವಿಚಾರಣೆಗೆ ಹಾಜರಾಗಲು ವಿಫಲವಾದ ಕಾರಣ, ಆಯೋಗ ಅವರಿಗೆ ₹25 ಸಾವಿರ ದಂಡ ವಿಧಿಸಿದೆ ಎಂದು ಸರ್ಕಾರದ ಪರ ವಕೀಲರು ಗುರುವಾರ ತಿಳಿಸಿದ್ದಾರೆ.
ಈ ವರ್ಷದ ಮಾರ್ಚ್ ತಿಂಗಳಲ್ಲಿ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ವಿರುದ್ಧ ಪರಮ್ಬೀರ್ ಸಿಂಗ್ ಭ್ರಷ್ಟಾಚಾರದ ಆರೋಪ ಹೊರಿಸಿದ್ದರು. ಈ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೈಲಾಶ್ ಉತ್ತಮ್ಚಂದ್ ಚಾಂಡಿವಾಲ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ರಚಿಸಿತ್ತು.
ಕಳೆದ ವಿಚಾರಣೆಗೆ ಗೈರಾದ ವೇಳೆಯಲ್ಲಿ ತನಿಖಾ ಆಯೋಗ ‘ನಿಮಗೆ ಇದು ಕೊನೆ ಅವಕಾಶ‘ ಎಂದು ಎಚ್ಚರಿಕೆ ನೀಡಿತ್ತು. ಆದರೂ, ಈ ಬಾರಿಯೂ ವಿಚಾರಣೆಗೆ ಗೈರಾದ ಕಾರಣ, ದಂಡ ವಿಧಿಸಿದೆ.