ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸೋಲು ಖಚಿತ : ಪ್ರಶಾಂತ್ ಕಿಶೋರ್!

prashanth kishore

ಮುಂಬರುವ ಗುಜರಾತ್(Gujarat) ಮತ್ತು ಹಿಮಾಚಲ ಪ್ರದೇಶ(Himachal Pradesh) ವಿಧಾನಸಭಾ ಚುನಾವಣೆಯಲ್ಲಿ(Vidhansabha Elections) ಕಾಂಗ್ರೆಸ್ (Congress) ಪಕ್ಷ ಸೋಲುವುದು ಖಚಿತ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್(Prashanth Kishore) ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಟ್ವೀಟ್(Tweet) ಮಾಡಿರುವ ಅವರು, ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಯಾವುದೇ ಅರ್ಥಪೂರ್ಣ ನಿರ್ಣಯವನ್ನು ತೆಗೆದುಕೊಂಡಿಲ್ಲ. ನನ್ನ ದೃಷ್ಟಿಯಲ್ಲಿ, ಯಥಾಸ್ಥಿತಿಯನ್ನು ಮುಂದುವರೆಸಲಾಗಿದೆ ಅಷ್ಟೇ. ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಯಾವುದೇ ಬದಲಾವಣೆಗಳನ್ನು ಮಾಡಿಕೊಂಡಿಲ್ಲ. ಪ್ರಮುಖ ಬದಲಾವಣೆಗಳು ಕಾಂಗ್ರೆಸ್ ಪಕ್ಷದಲ್ಲಿ ಕಂಡುಬಂದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆ ಸೋಲಿನವರೆಗೂ ಈಗಿರುವ ನಾಯಕತ್ವಕ್ಕೆ ಅವಕಾಶ ನೀಡಲಾಗಿದೆ ಎಂದು ಪರೋಕ್ಷವಾಗಿ ನಾಯಕತ್ವ ಬದಲಾವಣೆಯ ಅಂಶವನ್ನು ಕೆದಕಿದ್ದಾರೆ.

ಇನ್ನು ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ‘ಭಾರತ ಜೋಡೋ’ ಯಾತ್ರೆಯನ್ನು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಅಕ್ಟೋಬರ್ 2 ರಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಅದೇ ರೀತಿ ‘ಒಂದು ಕುಟುಂಬಕ್ಕೆ ಒಂದು ಟಿಕೆಟ್’ ನೀತಿಯನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಆದರೆ ಈ ನೀತಿಯಿಂದ ಕೆಲ ಕುಟುಂಬಗಳಿಗೆ ವಿನಾಯಿತಿ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ.

ಇನ್ನು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲು ಸಿದ್ದತೆ ನಡೆಸಿದ್ದರು. ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷಕ್ಕೆ ಹೊಸ ಕಾಯಕಲ್ಪ ನೀಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಅನೇಕ ಸಭೆಗಳನ್ನು ನಡೆಸಿದ್ದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದರು. ಆದರೆ ಅಂತಿಮವಾಗಿ ತಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಗದ ಹಿನ್ನಲೆಯಲ್ಲಿ ಅವರು ಕಾಂಗ್ರೆಸ್ ಪಕ್ಷ ಸೇರುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು.

Exit mobile version