ಸರ್ಕಾರದ ವಿರುದ್ಧ ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡನೆ: ಸಿದ್ದರಾಮಯ್ಯ

ಬೆಂಗಳೂರು, ಮೇ. 21: ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ರಾಜ್ಯ ಸರ್ಕಾರದ ವಿರುದ್ಧ ಮುಂಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಎಂದರೆ ಅದು ಸಾಂವಿಧಾನಿಕ ಹುದ್ದೆ. ಹೀಗಾಗಿ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿರುವುದರಿಂದ ಹಕ್ಕುಚ್ಯುತಿ ಆಗಿದೆ. 2009ರಲ್ಲಿ ಸಹ ಸರ್ಕಾರ ಇದೇ ನಿಲುವು ಅನುಸರಿಸಿತ್ತು. ತಮ್ಮ ಹುಳುಕು ಹೊರ ಬರುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಅವರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅನುಮತಿ ನೀಡುತ್ತಿಲ್ಲ.

ಕೊರೊನಾ ನಿಯಂತ್ರಣ ಮತ್ತು ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರುಪಯುಕ್ತ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಜನತೆ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಅವರಿಗೆ ಶಾಪ ಹಾಕುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ಟೀಕಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯದಿಂದ ಸಾವಿರಾರು ಜನ ಸಾಯುತ್ತಿದ್ದಾರೆ. ಸತ್ಯ ಹೇಳಿದರೆ ಕೇಸು ದಾಖಲಿಸುವ, ಬಂಧಿಸುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರಾಗಲೀ, ಸಾಮಾಜಿಕ ಕಳಕಳಿಯಿರುವ ಯಾವ ವ್ಯಕ್ತಿಗಳೇ ಆಗಲಿ ಹೆದರಬಾರದು. ಪ್ರವಾಹ ಪರಿಹಾರದ ವಿಚಾರದಲ್ಲಿಯೂ ಕೇಂದ್ರ ಸರ್ಕಾರ ತಾರತಮ್ಯ ಧೊರಣೆ ಅನುಸರಿಸುತ್ತಿದೆ. ಗುಜರಾತ್ ಗೆ ಒಂದು ಸಾವಿರ ಕೋಟಿ ರೂ.ಗಳ ಪರಿಹಾರ ಘೋಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತದಿಂದ ತತ್ತರಿಸಿರುವ ಕರ್ನಾಟಕಕ್ಕೆ ನಯಾಪೈಸೆ ಕೊಟ್ಟಿಲ್ಲ. ನಮ್ಮ ರಾಜ್ಯಕ್ಕೆ ಏಕೆ ಮಲತಾಯಿ ಧೋರಣೆ? ಎಂದು ಪ್ರಶ್ನಿಸಿದ್ದಾರೆ.

ಕೋವಿಡ್ ಲಸಿಕೆ ನೀಡುವುದಕ್ಕೆ ನಾವು ವಿರೋಧ ಮಾಡಿರಲಿಲ್ಲ. ಎಲ್ಲರಿಗೂ ಲಸಿಕೆ ಸಿಗಬೇಕು. ಅದಕ್ಕಾಗಿ ಅಭಿಯಾನ ನಡೆಸಬೇಕು ಎಂದು ಈಗಲೂ ಒತ್ತಾಯ ಮಾಡುತ್ತೇನೆ. ಆದರೆ ಲಸಿಕೆಯೇ ಇಲ್ಲದೆ ಆಂದೋಲನಕ್ಕೆ ಚಾಲನೆ ನೀಡಿದವರು ಯಾರು? ಎಂದಿದ್ದಾರೆ.

Exit mobile version