ಸಿದ್ದರಾಮಯ್ಯನವರೇ, ತಮ್ಮ ಧರ್ಮಪತ್ನಿ ಹೆಸರಿನಲ್ಲೂ ನಿವೇಶನ ವರ್ಗಾವಣೆ ಆಗಿದೆ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?- ಆರ್. ಅಶೋಕ್ ಪ್ರಶ್ನೆ

Mysore: ಗೋಲ್ಮಾಲ್ ಸಿಎಂ ಸಿದ್ದರಾಮಯ್ಯ (Siddaramaiah)ನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಎಂದು ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನ ಮುಡಾದಲ್ಲಿ ನಡೆದಿರುವ 4000 ಕೋಟಿ ರೂಪಾಯಿಗಳ ಹಗರಣ ಕುರಿತು ಸಿದ್ದರಾಮಯ್ಯನವರಿಗೆ ಏಳು ಪ್ರಶ್ನೆಗಳನ್ನು ಕೇಳಿದ್ದಾರೆ. ಅವುಗಳೆಂದರೆ,

Politics

1.) ಗೋಲ್ಮಾಲ್ (Golmal) ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?

2.) ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ?

3.) 4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನ ಅಸಲಿಗೆ ಸಿಬಿಐ (CBI)ಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ (IAS) ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?

4.) 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?

5.)ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು?

6.) ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು?

7.) ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ?

Exit mobile version