RAF ಘಟಕ ಉದ್ಘಾಟನಾ ಸಮಾರಂಭ: ಕನ್ನಡ ಭಾಷೆ ಬಳಕೆಗೆ ಹಿಂದೇಟು ಹಾಕಿದ ಸರ್ಕಾರದ ವಿರುದ್ಧ ಎಚ್ಡಿಕೆ ಕಿಡಿ

ಬೆಂಗಳೂರು, ಜ. 18: ಭದ್ರಾವತಿಯಲ್ಲಿ ನಡೆದ ಆರ್.ಎ.ಎಫ್ ಘಟಕದ ಶಂಕುಸ್ಥಾಪನೆ ಸಮಾರಂಭದಲ್ಲಿ ಕನ್ನಡ ಭಾಷೆ ಬಳಸದೆ ರಾಜ್ಯದ ಜನರ ಆಕ್ರೋಶಕ್ಕೆ ಗುರಿಯಾಗಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಾರಂಭದಲ್ಲಿ ಕನ್ನಡ ಭಾಷೆ ಬಳಕೆಗೆ ಹಿಂದೇಟು ಹಾಕಿದ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆಯನ್ನು ಖಂಡಿಸಿರುವ ಎಚ್ಡಿಕೆ, ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣ ಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ ಎಂದು ಕಿಡಿಕಾರಿದ್ದಾರೆ.

ಅಲ್ಲದೇ, ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು,ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ,ಕನ್ನಡಿಗರಿಗೆ ಮಾಡಿದ ಅಗೌರವ.ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ.

ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅಪಮಾನ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ.
ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು.

ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Exit mobile version