ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ, ಇನ್ನೂ 3ದಿನ ಮಳೆ ಸಾಧ್ಯತೆ

ಬೆಂಗಳೂರು ನ 11 : ಸಿಲಿಕಾನ್ ಸಿಟಿಯಲ್ಲಿ ಬೆಳಗ್ಗೆಯೇ ಶುರುವಾದ ಮಳೆಯಿಂದಾಗಿ ಬೆಳಿಗ್ಗೆಯೇ ಕೆಲಸ, ಕಚೇರಿಗಳಿಗೆ ತೆರಳುವ ಜನರು, ವಾಹನ ಸವಾರರು ಪರದಾಡುವಂತಾಗಿದೆ.

ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಆರಂಭವಾಗಿದ್ದು, ನಗರದ ಪ್ರಮುಖ ಸ್ಥಳಗಳಾದ ಮೆಜೆಸ್ಟಿಕ್, ಶಿವಾನಂದ ಸರ್ಕಲ್, ಕಾರ್ಪೊರೇಷನ್, ಕೆ.ಆರ್ ಮಾರುಕಟ್ಟೆಯಲ್ಲಿ ಮಳೆ ಸುರಿದು ಜನ ಜೀವನ ಅಸ್ಥವ್ಯಸ್ಥಗೊಂಡಿದೆ.

ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ನವೆಂಬರ್​ 13 ರವೆರೆಗೆ, 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಇಂದಿನಿಂದ 3 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ 2-3 ದಿನ ಇದೇ ಹವಾಮಾನ ಮುಂದುವರಿಯಲಿದೆ. ಬುಧವಾರ ಸಹ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ.

Exit mobile version