ರೈತರ ಪ್ರತಿಭಟನೆ: ಮೃತಪಟ್ಟ ರೈತರ ಗೌರವಾರ್ಥ ನಾಳೆ ಶೋಕ ದಿನ ಆಚರಣೆ

ನವದೆಹಲಿ, ಡಿ. 18:  ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಇಂದು 24ನೇ ದಿನಕ್ಕೆ ಕಾಲಿಟ್ಟಿದೆ. ಈಗಾಗಲೇ ರೈತರು ಹಾಗೂ ಕೇಂದ್ರ ಸರ್ಕಾರದ ನಡುವೆ 5 ಸುತ್ತಿನ ಸಭೆಗಳು ಹಾಗೂ ಕೇಂದ್ರ ಗೃಹ ಸಚಿವ ನಡೆಸಿದ ಅನೌಪಚಾರಿಕ ಮಾತುಕತೆಗಳೆಲ್ಲವೂ ವಿಫಲವಾಗಿದ್ದು, ನಾಳೆ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಗೌರವಾರ್ಥ ‘ಶೋಕದಿನ’ ಆಚರಿಸಲಾಗುತ್ತಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ವಿವಿಧ ಸಚಿವರೊಂದಿಗೆ ಈಗಾಗಲೇ 5 ಸುತ್ತಿನ ಮಾತುಕತೆಗಳು ನಡೆದಿವೆ.  ಅಮಿತ್‌ ಶಾ 13 ರೈತ ಸಂಘಟನಗಳ ಪ್ರತಿನಿಧಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ. ಆದರೆ ಯಾವುದೇ ಮನವೊಲಿಕೆಯು ಸಫಲವಾಗಿಲ್ಲ. ಈ ಮಾತುಕತೆಯಿಂದ ಸಮಸ್ಯೆ ಬಗೆಹರಿಸುವ ಸಾಧ್ಯತೆ ಕ್ಷೀಣಿಸಿದ್ದು, ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸಲಿದ್ದಾರೆ. ಈಗಾಗಲೇ ಅನೇಕ ರೀತಿಯ ಪ್ರತಿಭಟನೆಗಳನ್ನು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಯಾವ ರೀತಿಯ ಪ್ರತಿಭಟನೆ ನಡೆಸುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಜತೆಗೆ ಕನಿಷ್ಠ ಬೆಂಬಲ ಬೆಲೆ ಪದ್ಧತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ಕಾನೂನುಗಳನ್ನು ಹಿಂಪಡೆಯಬೇಕು. ರೈತರ ಎಲ್ಲಾ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್‌ ಕಾನೂನನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯಾಗಿದೆ.

ಇದಕ್ಕೆ ಒಪ್ಪಿಗೆ ಸೂಚಿಸದ ಕೇಂದ್ರ ಸರ್ಕಾರ, ರೈತರ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಆದ್ದರಿಂದಲೇ ಅಧಿಕೃತವಾಗಿ, ಅನೌಪಚಾರಿಕವಾಗಿ ನಡೆಸಿದ ಎಲ್ಲಾ ಮಾತುಕತೆಗಳು ವಿಫಲವಾಗಿಯೇ ಉಳಿದಿದೆ. ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಶಾಂತವಾಗಿಯೇ ನಡೆಸಿದ ರೈತರು ತನ್ನ ನಿಲುವಿನಿಂದ ಹಿಂದೆ ಸರಿಯಲಿಲ್ಲ, ಹಾಗೂ ಕೇಂದ್ರ ಸರ್ಕಾರವು ತನ್ನ ಹಠಮಾರಿತನದಿಂದ ಹಿಂದೆ ಸರಿಯಲಿಲ್ಲ. ಈ ಕಾರದಿಂದಾಗಿ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ.

ಈಗಾಗಲೇ, ರೈತರು ಉಪವಾಸ ಸತ್ಯಾಗ್ರಹ, ದೆಹಲಿ ಚಲೋ, ಹೆದ್ದಾರಿಗಳ ತಡೆ ಮಾಡಿ ಪ್ರತಿಭಟನೆ, ಸಚಿವರ ಮನೆ ಮುಂದೆ ಧರಣಿ ಹೀಗೆ ಅನೇಕ ರೀತಿಯ ಪ್ರತಿಭಟನೆಗಳನ್ನು ಮಾಡಿದ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶಾದ್ಯಂತ ರೈಲು ಸಂಚಾರಕ್ಕೆ ಅಡ್ಡಿಪಡಿಸುವುದಾಗಿ ತಿಳಿಸಿದ್ದಾರೆ. ಆದರೆ ದಿನಾಂಕವಿನ್ನು ನಿಗದಿಯಾಗಿಲ್ಲ.

Exit mobile version