Bengaluru: ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ (Srikanth Pujari) ಅವರನ್ನು 31ವರ್ಷದ ನಂತರ ಅಯೋಧ್ಯೆ ಪ್ರಕರಣಕ್ಕೆ ಮರು ಜೀವ ಕೊಟ್ಟ ಬೆನ್ನಲ್ಲೇ ಇವರನ್ನು ಬಂಧಿಸಿದ್ದು, ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B Y Vijayendra) ಅವರು ನಾಳೆ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ.
ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಇದು 5 ಅಥವಾ 10 ವರ್ಷದ ಹಳೆಯ ಪ್ರಕರಣ ಇದಲ್ಲ. 31 ವರ್ಷದ ಹಳೆಯ ಪ್ರಕರಣಕ್ಕೆ ಮರು ಜೀವ ಕೊಟ್ಟಿದ್ದಾರೆ. ಶ್ರೀಕಾಂತ್ ಪೂಜಾರಿ ಅವರನ್ನು ಬಂಧನಕ್ಕೆ ಒಳಪಡಿಸಿರುವುದು ಸರಿಯಲ್ಲ. ಇದನ್ನು ಖಂಡಿಸುತ್ತೇನೆ ಎಂದರು.
ಜನವರಿ (January) 22ರಂದು ಅಯೋಧ್ಯೆ (Ayodhya)ಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದು ಕಾರ್ಯಕರ್ತರು ಸಂತಸದಲ್ಲಿದ್ದಾರೆ. ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರ್ಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದರು.
ನಾಳೆ ಕರ್ನಾಟಕದೆಲ್ಲೆಡೆ ಪ್ರತಿಭಟನೆ
ರಾಮನ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಕೆತ್ತನೆ ಮಾಡಿದ್ದಾಗಿ ನಿನ್ನೆ ಸಂಭ್ರಮದಿಂದ ಇದ್ದೆವು. ರಾಜ್ಯದ ಪ್ರತಿಯೊಬ್ಬರು ಹೆಮ್ಮೆ ಪಡುವ ಸಂದರ್ಭದಲ್ಲಿ ಕಾಂಗ್ರೆಸ್ (Congress) ಸರ್ಕಾರವು, ಹಳೆಯ ಕೇಸನ್ನು ಮತ್ತೆ ಓಪನ್ ಮಾಡಿ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿರುವುದು ಖಂಡನೀಯ. ಹಿಂದು ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ (Bengaluru Freedom Park) ಮಾತ್ರವಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಬಿ.ವೈ. ವಿಜಯೇಂದ್ರ ಪ್ರಕಟಿಸಿದರು.
ಇಡೀ ದೇಶದಲ್ಲಿ ಸಂಭ್ರಮ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಸರ್ಕಾರವು ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿದೆ. ಇದಕ್ಕೆ ತಕ್ಕ ಶಾಸ್ತಿಯನ್ನು ಮತದಾರರು ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಏನಿದು ಪ್ರಕರಣ:
ಕರಸೇವೆಗೂ ಮುನ್ನ ಅಂದರೆ 1992ರ ಡಿಸೆಂಬರ್ (December) 5ರಂದು ಹುಬ್ಬಳ್ಳಿಯಲ್ಲಿ(Hubli) ಗಲಾಟೆಗಳು ನಡೆದಿದ್ದವು. ಈ ವೇಳೆ ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣದಲ್ಲಿ 9 ಜನರ ವಿರುದ್ಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿತ್ತು.
ಭವ್ಯಶ್ರೀ ಆರ್ ಜೆ