ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ(West Bengal) ನಾಡಿಯಾದ ಹಂಸಾಕಾಲಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ(Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ನಲ್ಲಿ(Calcutta)ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ. ಸ್ನೇಹಿತರ ಹುಟ್ಟುಹಬ್ಬದ ಪಾರ್ಟಿಗೆ ಹೋದಾಗ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಅತ್ಯಾಚಾರಕ್ಕೆ ಒಳಗಾದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾಳೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ತೃಣಮೂಲ ಕಾಂಗ್ರೆಸ್‌ನ ಸ್ಥಳೀಯ ಪಂಚಾಯತ್ ನಾಯಕರೊಬ್ಬರ ಒತ್ತಡದ ಮೇರೆಗೆ ಯುವತಿಯ ಶವ ಪರೀಕ್ಷೆ ನಡೆಸದೆ ಶವವನ್ನು ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಮೃತ ಯುವತಿಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಭಾರತೀಯ ಜನತಾ ಪಕ್ಷ ಸೋಮವಾರ ರಾಣಾಘಾಟ್‌ನಲ್ಲಿ 12 ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿತು.

ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರು ಪಿಐಎಲ್ ಸಲ್ಲಿಸಲು ಅರ್ಜಿದಾರರಿಗೆ ಅನುಮತಿ ನೀಡಿದ್ದಾರೆ. ನಾಳೆ ವಿಚಾರಣೆ ಆರಂಭವಾಗಬಹುದು ಎಂದು ತಿಳಿದುಬಂದಿದೆ. ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಜೀವಗಳನ್ನು ಬಲಿತೆಗೆದುಕೊಂಡ ಬಿರ್ಭೂಮ್ ಅಗ್ನಿಸ್ಪರ್ಶದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ಗುರಿಯಾಗಿಸಲು ಪ್ರತಿಪಕ್ಷವಾದ ಬಿಜೆಪಿ ನಿಯಮಿತವಾಗಿ ಈ ವಿಷಯವನ್ನು ಕೆದಕಿ ಹೇಳುತ್ತಿದೆ ಎಂಬ ವಾದ-ವಿವಾದಗಳು ಕೂಡ ಕೇಳಿಬಂದಿವೆ.