ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ: ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಟಾಂಗ್

ಬೆಂಗಳೂರು, ಜ. 18: ಬೆಳಗಾವಿ ಬಗ್ಗೆ ಮಾತನಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎ‌ಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ.

ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ.
ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ.

ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ.
ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ.

ಮಹಾರಾಷ್ಟ್ರ ಮುಖ್ಯಮಂತ್ರಿ ಅವರ ಉದ್ಧಟತನದ ಹೇಳಿಕೆಗೆ
ಕರ್ನಾಟಕದ ಮುಖ್ಯಮಂತ್ರಿ ಅವರು, ಅಧಿಕೃತವಾಗಿ ತಕ್ಕ
ಪ್ರತ್ಯುತ್ತರ ನೀಡಬೇಕು.

ಮಹಾರಾಷ್ಟ್ರ ಮುಖ್ಯಮಂತ್ರಿ ಅವರೇ, ಕನ್ನಡಿಗರು
ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಬೆಳಗಾವಿ ನಮ್ಮದು ಎಂದಿದ್ದಾರೆ.

Exit mobile version