ಕಾವೇರಿ ಕಿಚ್ಚು: ಕಾವೇರಿ ಹೋರಾಟಕ್ಕೆ ಸುದೀಪ್, ದರ್ಶನ್, ಶಿವರಾಜ್‌ಕುಮಾರ್‌ ಸೇರಿ ಸ್ಟಾರ್ ನಟರಿಂದ ಬೆಂಬಲ

Bengaluru: ಕಾವೇರಿ (Kaveri) ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ಸ್ಯಾಂಡಲ್ವುಡ್ನ (Sandalwood) ಸ್ಟಾರ್ ನಟರು ರಾಜ್ಯ ಸರ್ಕಾರದ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ಕಿಚ್ಚ ಸುದೀಪ್@Sudeep, ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ .

ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ ಎಂದಿದ್ದಾರೆ. ನಟ ದರ್ಶನ್ ತೂಗುದೀಪ #DarshanToogudeepa ಅವರು, ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ.

ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ಟ್ವೀಟ್ ಮಾಡಿದ್ದಾರೆ. ನಟ ಶಿವರಾಜಕುಮಾರ್ (Shivarajkumar) ಅವರು, ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ.

ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ ಎಂದು ಟ್ವೀಟ್ ಮಾಡಿದ್ದರೆ, ನಟ ಡಾಲಿ ಧನಂಜಯ (Dolly Dhananjaya) ಅವರು, ಮಳೆಯ ಅಭಾವದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕಾವೇರಿ ಕೃಷ್ಣ ನದಿಗಳ ಹೋರಾಟ ನಮ್ಮ ಎಲ್ಲರ ಕರ್ತವ್ಯ . ನಮ್ಮ ರೈತರಿಗೆ ಸಿಗಬೇಕಾದ ಪಾಲು ಸಿಗಲೇಬೇಕು. ನಮ್ಮ ಹಕ್ಕಿಗಾಗಿ ಸದಾ ಹೋರಾಡೋಣ. ಕಾವೇರಿ ಸಂಘರ್ಷ ಬೇಗ ಅಂತ್ಯವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

Exit mobile version