ಬೆಂಗಳೂರು, ನ. 23: ಕೋವಿಡ್-19 ಹಿನ್ನಲೆಯಲ್ಲಿ ಶಾಲೆಗಳು ಇದುವರೆಗೂ ಪ್ರಾರಂಭಿಸದೆ ಮಕ್ಕಳು ಮನೆಯಲ್ಲೇ ಆನ್ಲೈನ್ ತರಗತಿಗಳಿಗೆ ಹೊಂದಿಕೊಂಡಿದ್ದು, ಇದೀಗ ರಾಜ್ಯದಲ್ಲಿ ಕಾಲೇಜುಗಳು ಆರಂಭವಾದ ಹಿನ್ನೆಲೆಯಲ್ಲಿ ಶಾಲೆಗಳನ್ನೂ ಆರಂಭಿಸುವ ಕುರಿತು ಚರ್ಚೆಗಳು ಶುರುವಾಗಿವೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆಯೂ ನಡೆಯಿತು. ಆದರೆ ಸಧ್ಯ ಶಾಲೆಗಳನ್ನು ಆರಂಭಿಸುವುದು ಬೇಡ ಎಂದು ಸಿಎಂ ನೇತೃತ್ವದಲ್ಲಿ ರಾಜ್ಯ ಆರೋಗ್ಯ ಇಲಾಖೆ ಅಭಿಪ್ರಾಯ ಪಟ್ಟಿತ್ತು. ಒಂದರಿಂದ ಎಂಟನೇ ತರಗತಿಯ ವರೆಗೆ ಶಾಲೆಗಳು ಡಿಸೆಂಬರ್ ತಿಂಗಳಿನಲ್ಲೂ ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ತಾಂತ್ರಿಕ ಸಮಿತಿ ಅಧ್ಯಕ್ಷ ಡಾ.ಎಂ.ಕೆ. ಸುದರ್ಶನ್ ಅವರು ಆರೋಗ್ಯ ಇಲಾಖೆಗೆ ವರದಿ ಕೊಟ್ಟಿದ್ದು, ಡಿಸೆಂಬರ್ನಲ್ಲಿ ಶಾಲೆ ತೆರೆಯುವುದು ಬೇಡ ಎಂದು ಅಭಿಪ್ರಾಯಪಟ್ಟಿದೆ.
ಈಗ ಚಳಿಗಾಲವಾಗಿರುವುದರಿಂದ ಕೋವಿಡ್ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತದೆ. ಸೆಪ್ಟೆಂಬರ್ ನಲ್ಲಿ ನಡೆದ ಸರ್ವೆ ಪ್ರಕಾರ, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ, ಡಿಸೆಂಬರ್ ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ, ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ. ಇದೇ ಅಭಿಪ್ರಾಯವನ್ನು ಆರೋಗ್ಯ ಇಲಾಖೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಮಂಡಿಸಲಾಯಿತು.