ಶಿವಮೊಗ್ಗ ಸ್ಪೋಟ ಪ್ರಕರಣ: ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಶಿವಮೊಗ್ಗ, ಜ. 28: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ಸ್ಪೋಟ ಪ್ರಕರಣ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸ್ಪೋಟ ಪ್ರಕರಣದ ‌ಹಿನ್ನೆಲೆಯಲ್ಲಿ ಬುಧವಾರ ಶಿವಮೊಗ್ಗಕ್ಕೆ ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ, ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರಲ್ಲದೇ, ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಹಿನ್ನೆಲೆಯಲ್ಲಿ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಹುಣಸೋಡಿನಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ. ಪರಿಹಾರ ನೀಡಲು ಕಾನೂನಾತ್ಮಕ ಅಡ್ಡಿಗಳಿದ್ದರೂ ಮಾನವೀಯತೆ ನೆಲೆಯಲ್ಲಿ ಸ್ಪಂದಿಸಬೇಕು ಎಂದು ತಿಳಿಸಿದ್ದೇನೆ.

ಹುಣಸೋಡು ದುರಂತದ ಹೊಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಹೊರಬೇಕು. ಇವರ ಬೆಂಬಲದ ಕಾರಣದಿಂದಾಗಿಯೇ ಅಕ್ರಮ ಗಣಿಕಾರಿಕೆ ಬಗ್ಗೆ ಅಧಿಕಾರಿಗಳು ಕ್ರಮಕೈಗೊಳ್ಳದೆ ನಿಷ್ಕ್ರಿಯರಾಗಿದ್ದರು.

ಈ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗಳ ಹಿಂದೆ ಯಾರಿದ್ದಾರೆ ಎಂಬ ಸತ್ಯಸಂಗತಿ ಜಗತ್ತಿಗೆ ಗೊತ್ತಾಗಬೇಕಾದರೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

Exit mobile version