ಜನಸ್ವರಾಜ್‌ ಯಾತ್ರೆ ನಡೆಸಲು ಬಿಜೆಪಿಗೆ ನೈತಿಕತೆ ಇಲ್ಲ

 ಚಿಕ್ಕಮಗಳೂರು : ಡಿ 3 ಸಾಮಾಜಿಕ ನ್ಯಾಯ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿರುವ ಬಿಜೆಪಿಯವರಿಗೆ ಜನ ಸ್ವರಾಜ್ಯ ಯಾತ್ರೆ ನಡೆಸಲು ನೈತಿಕ ಹಕ್ಕಿಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಟೀಕಿಸಿದರು.

ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು,  ಬಿಜೆಪಿಯವರು ಜನ ಸ್ವರಾಜ್ಯಯಾತ್ರೆ ಆರಂಭಿಸಿದ್ದಾರೆ.‌ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದರೂ ಅವರು ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮಾಡಲಿಲ್ಲ. ಅಧಿಕಾರ ವಿಕೇಂದ್ರೀಕರಣದಲ್ಲಿ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಆ ವ್ಯವಸ್ಥೆಯಲ್ಲಿ ಪ್ರಾಮಾಣಿಕವಾಗಿ ಕೆಲಸವನ್ನೂ ಮಾಡಲಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ನಂಬಿಕೆ ಇದ್ದಿದ್ದರೆ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಮುಂದೂಡುತ್ತಿರಲಿಲ್ಲ. ಚುನಾವಣೆ ಮುಂದೂಡಲು ಒಂದು ಕಾನೂನು ಬೇರೆ  ತಂದಿದ್ದಾರೆ. ಚುನಾವಣೆ ನಡೆಸುವ ವಿಚಾರದಲ್ಲಿ ಬಿಜೆಪಿಯವರಿಗೆ ಬದ್ಧತೆ ಇಲ್ಲ ಎಂದು ಕಿಡಿಕಾರಿದರು.

ಮೋದಿಯವರು ಪ್ರಧಾನಿಯಾಗಿ ಎಂಟು ವರ್ಷಗಳಾದರೂ ಸ್ಥಳೀಯ ಸಂಸ್ಥೆಗಳಿಗೆ ಹಣಕಾಸು ಶಕ್ತಿ ತುಂಬಲಿಲ್ಲ. ಯಾವುದೇ ಕಾರ್ಯಕ್ರಮವ ರೂಪಿಸಲಿಲ್ಲ. ಸಾಮಾಜಿಕ ನ್ಯಾಯ ಮತ್ತು ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿರುವ ಬಿಜೆಪಿಯವರಿಗೆ ಜನ ಸ್ವರಾಜ್ಯ ಯಾತ್ರೆ ನಡೆಸಲು ನೈತಿಕ ಹಕ್ಕಿಲ್ಲ. ಪಂಚಾಯತ್ ರಾಜ್ ವ್ಯವಸ್ಥೆ, ಸಾಮಾಜಿಕ ನ್ಯಾಯದ ಬಗ್ಗೆ ಒಂದು ದಿನವೂ ಬಿಜೆಪಿ ನಾಯಕರು ಮಾತಾಡಿಲ್ಲ. ಅವರಿಗೆ ಆ ಕುರಿತು ಬದ್ಧತೆಯೇ ಇಲ್ಲ. ಇಂಥವರು ಗೆದ್ದು ಬಂದರೆ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಏನೂ ಕೆಲಸ ಮಾಡುವುದಿಲ್ಲ ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.

ಪ್ರಾಣೇಶ್ ಅಭಿವೃದ್ದಿ ಮಾಡಿಲ್ಲ :

ಚಿಕ್ಕಮಗಳೂರು ಕ್ಷೇತ್ರದಿಂದ ಕಳೆದ ಬಾರಿ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಹೋದ ಪ್ರಾಣೇಶ್ ಒಂದು ದಿನವೂ ಪಂಚಾಯತ್ ರಾಜ್ ವ್ಯವಸ್ಥೆ ಕುರಿತು ಮಾತಾಡಿಲ್ಲ. ಯಾವುದೇ ಪಂಚಾಯತಿಗೆ ಹೋಗಿಲ್ಲ. ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ಕೊಟ್ಟಿದ್ದರೆ ಅದು ಕಾಂಗ್ರೆಸ್. ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ಕಾಯಿದೆಗೆ ತಿದ್ದುಪಡಿ ತಂದರು. ನರಸಿಂಹರಾವ್  ಅವರು ಅದನ್ನು ಜಾರಿಗೊಳಿಸಿದರು. ರಾಜ್ಯ ಬಿಜೆಪಿ ಸರ್ಕಾರ ಮೂರೂವರೆ ವರ್ಷದಲ್ಲಿ  ಬಡವರಿಗೆ ಒಂದೇ ಒಂದು ಮನೆ ಕೊಟ್ಟಿಲ್ಲ. ಕೊಟ್ಟಿದ್ದರೆ ಸಿ.ಟಿ. ರವಿ ಹೇಳಲಿ. ನಮ್ಮ ಅವಧಿಯಲ್ಲಿ‌ ಮಂಜೂರಾದ ಮನೆಗಳಿಗೆ ಎರಡನೇ ಕಂತಿನ ಅನುಸಾನ ಕೊಡದೆ ಲಾಕ್ ಮಾಡಿದರು. ಇನ್ನು ಪೆಟ್ರೋಲ್, ಡೀಸೆಲ್ , ಅಡುಗೆ ಅನಿಲ ದರ ಏರಿಕೆ  ವಿಚಾರದಲ್ಲಿ ಮೋದಿಯವರು ಜನರನ್ನ ದಾರಿ ತಪ್ಪಿಸುತ್ತಿದ್ದಾರೆ. ಅವರು  ಸತ್ಯ ಹೇಳಬೇಕು ಎಂದು ಸಿದ್ಧರಾಮಯ್ಯ ಲೇವಡಿ ಮಾಡಿದರು.

Exit mobile version