ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ: ಸಾರಿಗೆ ನೌಕರರಿಗೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್

ಬೆಳಗಾವಿ, ಏ. 08: ಸಾರಿಗೆ ಇಲಾಖೆ ನೌಕರರ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಸರ್ಕಾರ ಈಡೇರಿಸಿದೆ. ಹೀಗಿರುವಾಗ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಇವತ್ತು ಬೆಂಗಳೂರಿಗೆ ಹೋಗುತ್ತಿದ್ದೇನೆ. ಅಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಂಡು ಮುಂದೆ ತೆಗೆದುಕೊಳ್ಳಬೇಕಾದ ಕಠಿಣ ಕ್ರಮದ ಬಗ್ಗೆ ಪರಾಮರ್ಶೆ ನಡೆಸುತ್ತೇನೆ ಎಂದರು.

ಸಾರಿಗೆ ನೌಕರರ ಮುಷ್ಕರಕ್ಕೆ ಕಾಂಗ್ರೆಸ್ ನಾಯಕರು ಬೆಂಬಲ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಾಯಕರು ಈ ವಿಷಯವನ್ನು ರಾಜಕೀಯಕ್ಕಾಗಿ ಬಳಸಿಕೊಂಡರೆ ಏನು ಹೇಳಲಿ, ಸಿಬ್ಬಂದಿ ಕೆಲಸಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದಷ್ಟೇ ಹೇಳುತ್ತೇನೆ ಎಂದರು.

Exit mobile version