ಟಿ20 ಕ್ರಿಕೆಟ್: ಸೌತ್ ಆಫ್ರಿಕಾ ವಿರುದ್ಧ ಪಾಕಿಸ್ತಾನಕ್ಕೆ 3 ರನ್‌ಗಳ ರೋಚಕ ಜಯ

ಲಾಹೋರ್, ಫೆ. 12: ಆರಂಭಿಕ ಬ್ಯಾಟ್ಸ್‌ಮನ್‌ ಮೊಹಮ್ಮದ್‌ ರಿಜ್ವಾ಼ನ್(104*) ಭರ್ಜರಿ ಶತಕ ಹಾಗೂ ಬೌಲರ್‌ಗಳ ಸಮಯೋಚಿತ ಬೌಲಿಂಗ್ ದಾಳಿಯ ನೆರವಿನಿಂದ ಪಾಕಿಸ್ತಾನ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 3 ರನ್‌ಗಳ ರೋಚಕ ಗೆಲುವು ಸಾಧಿಸಿದೆ.

ಇಲ್ಲಿನ ಗಡಾಫಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಪಾಕಿಸ್ತಾನ ಮೊಹಮ್ಮದ್‌ ರಿಜ್ವಾ಼ನ್ (ಅಜೇಯ 104) ಸ್ಪೋಟಕ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್‌ಗಳಿಸಿತು. ಈ ಪೈಪೋಟಿಯ ಸವಾಲು ಬೆನ್ನತ್ತಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 166 ರನ್‌ಗಳಿಸುವ ಮೂಲಕ 3 ರನ್‌ಗಳ ವಿರೋಚಿತ ಸೋಲು ಕಂಡಿತು. ಈ ಗೆಲುವಿನೊಂದಿಗೆ ಅತಿಥೇಯ ಪಾಕಿಸ್ತಾನ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ, ಎದುರಾಳಿ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ಸು ಕಂಡಿತು. ತಂಡದ ಮೊತ್ತ 100ರ ಗಡಿದಾಟುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಆಟವಾಡಿದ ಮೊಹಮ್ಮದ್‌ ರಿಜ್ವಾ಼ನ್, ಇನ್ನಿಂಗ್ಸ್‌ ಆರಂಭದಿಂದಲೇ ಅಬ್ಬರಿಸಿದರು. ಸ್ಪೋಟಕ ಬ್ಯಾಟಿಂಗ್ ಮೂಲಕ ದಕ್ಷಿಣ ಆಫ್ರಿಕಾ ಬೌಲಿಂಗ್ ದಾಳಿಯನ್ನು ಎದುರಿಸಿದ ರಿಜ್ವಾ಼ನ್, ಕೇವಲ 64 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 6 ಬೌಂಡರಿಗಳ ಸಹಿತ ಅಜೇಯ ಶತಕ ಬಾರಿಸಿ ಅಬ್ಬರಿಸಿದರು. ಪರಿಣಾಮ ಪಾಕಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್‌ಗಳಿಸಿತು.

ಪಾಕಿಸ್ತಾನ ನೀಡಿದ ಪೈಪೋಟಿ ಮೊತ್ತ ಬೆನ್ನತ್ತಿದ ದಕ್ಷಿಣ ಆಫ್ರಿಕಾ, ನಿರೀಕ್ಷೆಯಂತೆ ಉತ್ತಮ ಆರಂಭ ಪಡೆಯಿತು. ಆರಂಭಿಕರಾಗಿ ಕಣಕ್ಕಿಳಿದ ಮಲನ್(44) ಹಾಗೂ ಹೆನ್ಡ್ರಿಕ್ಸ್(54) ಮೊದಲ ವಿಕೆಟ್‌ಗೆ ಅರ್ಧಶತಕದ ಜೊತೆಯಾಟದ ಕಾಣಿಕೆ ನೀಡಿದರು. ಆದರೆ ನಂತರ ಬಂದ ಬ್ಯಾಟ್ಸ್‌ಮನ್‌ಗಳು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ಎಡವಿದರು. ಪಂದ್ಯದ ಗೆಲುವಿಗೆ ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ 19 ರನ್‌ಗಳ ಅಗತ್ಯವಿತ್ತು. ಆದರೆ ಕೇವಲ 15 ರನ್‌ಗಳಿಸಿದ ದಕ್ಷಿಣ ಆಫ್ರಿಕಾ, 3 ರನ್‌ಗಳ ಸೋಲು ಕಂಡಿತು.

ಪಂದ್ಯದಲ್ಲಿ ಚೊಚ್ಚಲ ಟಿ20 ಶತಕ ಬಾರಿಸುವ ಮೂಲಕ ತಂಡದ ಗೆಲುವಿಗೆ ಕಾರಣವಾದ ರಿಜ್ವಾ಼ನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಉಭಯ ತಂಡಗಳ ನಡುವಿನ ಎರಡನೇ ಟಿ20 ಪಂದ್ಯ ಫೆ.13ರಂದು ಲಾಹೋರ್ ನಲ್ಲಿ ನಡೆಯಲಿದೆ.

Exit mobile version