ಟಿ20: ಪಾಕ್ ವಿರುದ್ಧ ಕಿವೀಸ್ ಪಡೆಗೆ 5 ವಿಕೆಟ್‌ಗಳ ಜಯ

ಆಕ್ಲೆಂಡ್, ಡಿ. 18‌: ವೇಗಿ ಜೇಕಬ್ ಡಫಿ(33ಕ್ಕೆ 4) ಹಾಗೂ ಆರಂಭಿಕ ಬ್ಯಾಟ್ಸ್‌ಮನ್‌ ಟಿಮ್ ಸೈಫರ್ಟ್(57) ಅರ್ಧಶತಕದ ನೆರವಿನಿಂದ ಪಾಕಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಇಲ್ಲಿನ ಈಡನ್ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ತಾನ, ಆರಂಭಿಕ ಬ್ಯಾಟ್ಸ್‌ಮನ್‌ಗಳ ವೈಫಲ್ಯದ ನಡುವೆಯೂ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನತ್ತಿದ ನ್ಯೂಜಿ಼ಲೆಂಡ್ 18.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 156 ರನ್‌ಗಳಿಸುವ ಮೂಲಕ ಗೆಲುವಿನ ನಗೆಬೀರಿತು.‌ ಕಿವೀಸ್ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಟಿಮ್ ಸೈಫರ್ಟ್(57) ಆಕರ್ಷಕ ಅರ್ಧಶತಕ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಉಳಿದಂತೆ ಚಾಂಪ್ಮನ್(34) ಹಾಗೂ ಗ್ಲೆನ್ ಫಿಲಿಪ್ಸ್(23) ರನ್‌ಗಳಿಸಿ ತಂಡದ ಗೆಲುವಿಗೆ ಕಾರಣರಾದರು. ಪಾಕ್ ಪರ ಹ್ಯಾರಿಸ್ ರೌಫ್ 3 ವಿಕೆಟ್ ಪಡೆದರು.

ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಜೇಕಬ್ ಡಫಿ(33ಕ್ಕೆ 4) ದಾಳಿಗೆ ತತ್ತರಿಸಿತು. ಮೊದಲ ಅಂತಾರಾಷ್ಟ್ರೀಯ ಟಿ20 ಪಂದ್ಯವಾಡಿದ ಯುವ ವೇಗಿಯ ಬೌಲಿಂಗ್ ದಾಳಿಗೆ ನಲುಗಿದ ಪಾಕ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 20 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಕಣಕ್ಕಿಳಿದ ನಾಯಕ ಶಬಾದ್ ಖಾನ್(42) ಹಾಗೂ ಅಷ್ರಫ್‌(31) ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಪಾಕಿಸ್ತಾನ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 153 ರನ್‌ಗಳಿಸಿತು. ಕಿವೀಸ್ ಪರ ಡಫಿ 4, ಕುಗ್ಲೆಜಿನ್ 3, ಸೋಧಿ ಹಾಗೂ ಟಿಕ್ನರ್ ತಲಾ 1 ವಿಕೆಟ್ ಪಡೆದರು.

Exit mobile version