Karnataka Rain; ನಾಳೆಯಿಂದ ಮಳೆ ತೀವ್ರಗೊಳ್ಳುವ ಸಾಧ್ಯತೆ; ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು, ಜೂ. 10: ಕರ್ನಾಟಕಕ್ಕೆ ಮುಂಗಾರು ಆಗಮನವಾಗಿರುವುದರಿಂದ ನಾಳೆಯಿಂದ ರಾಜ್ಯಾದ್ಯಂತ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಾಳೆಯಿಂದ 2 ದಿನ ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ನಾಳೆಯಿಂದ ಜೂನ್ 13ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕೂಡ ಮುಂಜಾನೆಯಿಂದಲೇ ಮಲೆನಾಡು, ಕರಾವಳಿಯಲ್ಲಿ ಮಳೆಯ ಸಿಂಚನವಾಗುತ್ತಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಕೂಡ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ನಾಳೆಯಿಂದ 3 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಹೀಗಾಗಿ, ಜೂನ್ 11ರಿಂದ 13ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯೂ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗಾಗಿ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್​ಡಿಆರ್​ಎಫ್​ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.


ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಜೂನ್ 11ರಿಂದ 13ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸಿಡಿಲು ಸಹಿತ ಮಳೆಯಾಗಲಿದೆ.

ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿರುವ ಮುಂಗಾರು ಕರ್ನಾಟಕಕ್ಕೆ ಎಂಟ್ರಿ ನೀಡಲು ಮೂರ್ನಾಲ್ಕು ದಿನಗಳು ಬೇಕಾಗುತ್ತದೆ ಎನ್ನಲಾಗಿತ್ತು. ಆದರೆ, ಜೂನ್ 5ಕ್ಕೇ ಕರ್ನಾಟಕಕ್ಕೆ ಮುಂಗಾರಿನ ಪ್ರವೇಶವಾಗಿದೆ. ಜೂನ್ ಮೂರನೇ ವಾರದ ವೇಳೆಗೆ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಮಲೆನಾಡಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ.

ಜೂನ್ 11ರಿಂದ 15ರವರೆಗೆ ಕೇರಳದಲ್ಲೂ ಭಾರೀ ಮಳೆಯಾಗಲಿದೆ. ರಾಜಸ್ಥಾನ, ಮಹಾರಾಷ್ಟ್ರ ಭಾಗದಲ್ಲೂ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕ, ಛತ್ತೀಸ್​ಘಡ, ಕೇರಳ, ಮಾಹೆ, ಗೋವಾ, ಅಂಡಮಾನ್ ನಿಕೋಬಾರ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ.

ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್, ಚಿಕ್ಕಮಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.

ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

Exit mobile version