ಬೆಂಗಳೂರು, ಮಾ. 19: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಆತಂಕ ಸೃಷ್ಟಿಯಾಗಿರುವ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಬ್ರೇಕ್ ಹಾಕಬೇಕೆಂಬ ಯಾವ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಆತಂಕ ಎದುರಾದ ಬೆನ್ನಲ್ಲೇ ಶೇ.50ಕ್ಕಿಂತ ಹೆಚ್ಚು ಸೀಟು ಭರ್ತಿಗೆ ಅವಕಾಶ ನೀಡಬಾರದು ಎಂಬ ಕುರಿತು ಬಿಬಿಎಂಪಿ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಸುದ್ದಿ ಹೊರ ಬರುತ್ತಿದ್ದಂತೆ ಚಿತ್ರರಂಗದ ಹಲವು ನಟರು, ನಿರ್ಮಾಪಕರು ಹಾಗೂ ನಿರ್ದೇಶಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಗೊಂದಲಕ್ಕೆ ತೆರೆ ಎಳೆದಿರುವ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಸ್ಪಷ್ಟಪಡಿಸಿದ್ದಾರೆ.