ಬೆಂಗಳೂರು, ಜು. 23: ಕೊರೊನಾ ಆತಂಕದ ನಡುವೆ ರಾಜ್ಯದಲ್ಲಿ SSLC ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡ ಬೆನ್ನಲ್ಲೇ ರಾಜ್ಯಾಧ್ಯಂತ ಶಾಲೆ ಆರಂಭಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಗೆ ಶೇ.100 ಲಸಿಕೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ.

ಇದಕ್ಕಾಗಿ ರಾಜ್ಯದ ಎಲ್ಲಾ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಕ್ರಮಬದ್ಧವಾಗಿ ಮತ್ತು ಆದ್ಯತೆ ಮೇರೆಗೆ ಲಸಿಕೆ ನೀಡಲು ಮಾರ್ಗಸೂಚಿ ರೂಪಿಸಲಾಗಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶಾಲೆಗಳ ಮುಖ್ಯಸ್ಥರು ತಮ್ಮ ಸಂಸ್ಥೆಯಲ್ಲಿ 100% ಲಸಿಕೆ ಪಡೆದಿರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

ಶಾಲಾ ಶಿಕ್ಷಕರು, ಬೋಧಕ & ಬೋಧಕೇತರ ಸಿಬ್ಬಂದಿ ಶೇ. 100 ಲಸಿಕೆ ನೀಡುವ ನಿಟ್ಟಿನಲ್ಲಿ ಸರ್ಕಾರ ಕೆಲವು ಕ್ರಮಗಳನ್ನ ಕೈಗೊಂಡಿದೆ. ಇದಕ್ಕಾಗಿ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಪಟ್ಟಿಯನ್ನ ಆರೋಗ್ಯ ಇಲಾಖೆಗೆ ನೀಡಬೇಕು. ಪ್ರತಿ ಶಾಲೆಗಳ ಮುಖ್ಯಸ್ಥರು ನೋಡಲ್ ಅಧಿಕಾರಿಯನ್ನ ನೇಮಿಸುವುದು, ಲಸಿಕೆ ಲಭ್ಯತೆಗೆ ಅನುಗುಣವಾಗಿ ಕ್ರಿಯಾ ಯೋಜನೆ ರೂಪಿಸುವುದು ಸೇರಿದಂತೆ ಇನ್ನಿತರ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.