ವರುಣನ ಅಬ್ಬರ: ಕೃಷ್ಣಾನದಿ ಪಾತ್ರದಲ್ಲಿ ಹೆಚ್ಚಿದ ಪ್ರವಾಹ: ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗೆ ಸಿಎಂ ಸೂಚನೆ

ಬೆಂಗಳೂರು, ಜು. 22: ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಕ್ರಮವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಕರಾವಳಿ ಪ್ರದೇಶ, ಉತ್ತರ ಕರ್ನಾಟಕ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈ ನಡುವೆ ಮಹಾರಾಷ್ಟ್ರದಲ್ಲೂ ವರುಣನ ಅಬ್ಬರ ಜೋರಾಗಿದೆ. ಹೀಗಾಗಿ ಕೃಷ್ಣಾನದಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವ ಪರಿಣಾಮ ಕೃಷ್ಣಾನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಹೆಚ್ಚಾಗಿರುವುದರಿಂದ ಜನಜೀವನ ಅಸ್ತವ್ಯಸ್ಥವಾಗಿದೆ.

ಈ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಹೆಚ್ಚಾದ ಕಾರಣ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ, ಪ್ರವಾಹ ಸಂಭವಿಸಬಹುದಾದ ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ‌ ನಿಗಾ ವಹಿಸುವಂತೆ ಹಾಗೂ ಜನ ಜಾನುವಾರುಗಳ ಸುರಕ್ಷತೆಗೆ ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೇ, ಸರ್ಕಾರದಿಂದ ಹೆಚ್ಚಿನ‌ ನೆರವು ಬೇಕಾದಲ್ಲಿ ಕೂಡಲೇ ಸಂಪರ್ಕಿಸುವಂತೆ ನಿರ್ದೇಶನ ನೀಡಿರುವ ಮುಖ್ಯಮಂತ್ರಿಗಳು, ಪ್ರವಾಹ ಪೀಡಿತ ಇತರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ನಿರಂತರ ಮಾಹಿತಿ ಪಡೆಯುತ್ತಿದ್ದಾರೆ.

Exit mobile version