ಬೆಂಗಳೂರು, ನ. 18: ಬಳ್ಳಾರಿಯನ್ನು ವಿಭಜಿಸಿ ವಿಜಯನಗರವನ್ನು ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡುವುದಕ್ಕೆ ಸಚಿವ ಸಂಪುಟ ತಾತ್ವಿಕ ಅನುಮೋದನೆ ನೀಡಿದ್ದು ಈ ಬಾರಿಯ ವಿಧಾನಸಭೆ ಅಧಿವೇಶನದಲ್ಲಿ ಸಾಕಾರಗೊಳ್ಳಲಿದೆ.
ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಸಚಿವ ಮಾಧುಸ್ವಾಮಿ, ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಿ, ಅಧಿಕೃತವಾಗಿ ಘೋಷಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಂದಿನ ಡಿ.7ರಿಂದ 15ರವರೆಗೆ ನಡೆಯಲಿರುವ ವಿಧಾನಸಭೆ ಚಳಿಗಾಲ ಅಧಿವೇಶನದಲ್ಲಿ ಅಧಿಕೃತ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಬೇಕೆಂದು ಸಚಿವ ಆನಂದ್ ಸಿಂಗ್ ಅವರ ಬಹುಕಾಲದ ಬೇಡಿಕೆಯಾಗಿತ್ತು. ನೂತನವಾಗಿ ರಚನೆಯಾಗುವ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ, ಹಡಗಲಿ, ಕಂಪ್ಲಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳನ್ನು ಒಳಗೊಂಡಿರಲಿದ್ದು ಹೊಸಪೇಟೆ ಜಿಲ್ಲಾ ಕೇಂದ್ರವಾಗಲಿದೆ. ಇನ್ನೂ ಈಗಿನ ಬಳ್ಳಾರಿ ಜಿಲ್ಲೆಯಲ್ಲಿ ಕೂಡ್ಲಿಗಿ, ಸಂಡೂರು, ಸಿರಗುಪ್ಪ, ಕುರುಗೋಡು ತಾಲೂಕುಗಳು ಉಳಿದುಕೊಳ್ಳಲಿವೆ.