ಪಶ್ಚಿಮ ಬಂಗಾಳ: ಟಿಎಂಸಿ- ಬಿಜೆಪಿ ಕಾರ್ಯಕರ್ತರ ನಡುವೆ ಗಲಭೆ; ಹಿಂಸಾಚಾರದಲ್ಲಿ 11 ಜನ ಸಾವು

ಕೊಲ್ಕತ್ತಾ, ಮೇ. 04: ದೇಶದೆಲ್ಲೆಡೆ ಭಾರೀ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಜಯಭೇರಿ ಬಾರಿಸಿದೆ. ಇದೀಗ ಚುನಾವಣಾ ಫಲಿತಾಂಶದ ಬಳಿಕ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿದ್ದು, ಹಿಂಸಾಚಾರಕ್ಕೆ ತಿರುಗಿದೆ. ಈ ಘಟನೆಯಲ್ಲಿ ಎರಡೂ ಪಕ್ಷಗಳ ಒಟ್ಟು 11 ಕಾರ್ಯಕರ್ತರು ಸಾವನ್ನಪ್ಪಿದ್ದಾರೆ.

ಬಂಗಾಳದಲ್ಲಿ 6 ಮಂದಿ ಬಿಜೆಪಿ ಕಾರ್ಯಕರ್ತರನ್ನು ಕೊಲ್ಲಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ಅದಕ್ಕೆ ಟಿಎಂಸಿಯೇ ನೇರ ಹೊಣೆ ಎಂದಿದೆ. ಪರ್ಬ ಬರ್ಧಮಾನ್ ಜಿಲ್ಲೆಯಲ್ಲಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಭೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೆಡೆ ತಮ್ಮ ಪಕ್ಷದ ಕಾರ್ಯಕರ್ತರ ಸಾವಿಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸುತ್ತಿದೆ. ಇನ್ನೊಂದೆಡೆ ತಮ್ಮ ಪಕ್ಷದ ಮೂವರು ಕಾರ್ಯಕರ್ತರ ಸಾವಿಗೆ ಬಿಜೆಪಿ ಕಾರಣ ಎಂದು ಟಿಎಂಸಿ ಪಕ್ಷ ಆರೋಪಿಸಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರದ ಬಗ್ಗೆ ವರದಿ ನೀಡುವಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಪಶ್ಚಿಮ ಬಂಗಾಳದ ಪೊಲೀಸ್ ಇಲಾಖೆಗೆ ಆದೇಶ ನೀಡಿದ್ದಾರೆ.

ಇನ್ನು, ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರದ ವಿಡಿಯೋಗಳು ಕೂಡ ವೈರಲ್ ಆಗಿವೆ. ಈ ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ನಂದಿಗ್ರಾಮದ ಬಿಜೆಪಿ ಎಂಎಲ್​ಎ ಸುವೇಂದು ಅಧಿಕಾರಿ, ಕೆಲವು ಗೂಂಡಾಗಳು ಇಂದು ಸಂಜೆ ನನ್ನ ಕಾರಿನ ಮೇಲೆ ದಾಳಿ ನಡೆಸಿದರು. ನನಗೇ ಈ ರೀತಿಯಾಗಿದ್ದರೆ ಇನ್ನು ಜನಸಾಮಾನ್ಯರ ಗತಿಯೇನು ಎಂದು ಟ್ವೀಟ್ ಮಾಡಿದ್ದಾರೆ. ಸುವೇಂದು ಅಧಿಕಾರಿ ಕೆಲವು ತಿಂಗಳ ಹಿಂದೆ ಟಿಎಂಸಿಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಳಿಕ ನಂದಿಗ್ರಾಮದಲ್ಲಿ ಈ ಬಾರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿ ಗೆಲುವು ಕಂಡಿದ್ದರು.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವಾಲಯ ಈ ಘಟನೆ ಬಗ್ಗೆ ವರದಿ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆದೇಶಿಸಿದೆ. ಭಾನುವಾರ ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 292 ಸ್ಥಾನಗಳ ಪೈಕಿ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಟಿಎಂಸಿ ಮತ್ತೊಮ್ಮೆ ದಿಗ್ವಿಜಯ ಸಾಧಿಸಿದೆ. ಬಿಜೆಪಿ ಕೇವಲ 77 ಸ್ಥಾನಗಳಲ್ಲಿ ಗೆಲುವು ಕಂಡು ಹೀನಾಯ ಸೋಲು ಅನುಭವಿಸಿದೆ.

Exit mobile version