ಹೊಸದಿಲ್ಲಿ, ಮಾ. 10: ಭಾರತೀಯ ಸೈನ್ಯದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್‌ಡಿಎ) ಮತ್ತು ಭಾರತೀಯ ನೌಕಾ ಅಕಾಡೆಮಿಗಳಿಗೆ(ಐಎನ್‌ಎ) ಸೇರಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಬುಧವಾರ ನೊಟಿಸ್ ನೀಡಿದೆ.
ಎನ್‌ಡಿಎ ಸೇರಲು ಅನುಮತಿ ನಿರಾಕರಿಸಲಾಗಿರುವ ಹಿನ್ನೆಲೆಯಲ್ಲಿ ತಮ್ಮನ್ನು ಕೂಡ ಪ್ರಕರಣದ ಪಕ್ಷಕಾರರನ್ನಾಗಿ ಮಾಡಿಕೊಳ್ಳುವಂತೆ ಮಹಿಳಾ ಅಭ್ಯರ್ಥಿ ಅನಿತಾ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರಿದ್ದ ಪೀಠ ಈ ಸಂಬಂಧ ಕೇಂದ್ರಕ್ಕೆ ನೋಟಿಸ್ ನೀಡಿತು.
ಎನ್‌ಡಿಎಗೆ ಸೇರ್ಪಡೆಗೊಳ್ಳಲು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನಿರಾಕರಿಸುವುದು ಸಂವಿಧಾನದ 14, 15, 16 ಮತ್ತು 19 ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಕುಶ್ ಕಲ್ರಾ ಅವರು ಅಡ್ವೊಕೇಟ್ ಆನ್ ರೆಕಾರ್ಡ್ ಮೋಹಿತ್ ಪಾಲ್ ಅವರ ಮೂಲಕ ಸಲ್ಲಿಸಿದ್ದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.