Shivamogga: ರಾಜ್ಯ ಸರ್ಕಾರದ ಗ್ಯಾರಂಟಿ (Guarantee) ಯೋಜನೆಗಳಲ್ಲೊಂದಾದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಇಂದು ಚಾಲನೆ ನೀಡಲಿದ್ದು, ಶಿವಮೊಗ್ಗ ಜಿಲ್ಲೆಯ ಹಳೆ ಜೈಲು ಆವರಣದ ಫ್ರೀಡಂ ಪಾರ್ಕ್ನಲ್ಲಿ (Freedom Park) ಬೃಹತ್ ವೇದಿಕೆ ಸಿದ್ದಗೊಂಡಿದೆ.
ಶಿವಮೊಗ್ಗ (Shimoga) ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಮತ್ತು ಸ್ಥಳೀಯ ಮುಖಂಡರ ಬ್ಯಾನರ್ಗಳು, ಪ್ಲೆಕ್ಸ್ಗಳು ರಾರಾಜಿಸುತ್ತಿದ್ದು, ಕಾರ್ಯಕ್ರಮದ ವೀಕ್ಷಣೆಗೆ ಬೃಹತ್ ಎಲ್ಇಡಿ ವಾಲ್ (LED Wall) ಆಳವಡಿಸಲಾಗಿದೆ. ನಗರದ ಹೃದಯ ಭಾಗದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದೆ.
ವಾಹನ ದಟ್ಟಣೆ ತಡೆಯಲು ಸುಗಮ ಸಂಚಾರ ಮಾರ್ಗ ಹಾಗೂ ಪಾರ್ಕಿಂಗ್ (Parking) ವ್ಯವಸ್ಥೆಗೆ ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದ್ದು, ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ 5ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದ್ದು, ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ (Diploma) ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ.
ನೋಂದಣಿ ಮಾಡಿಕೊಂಡ ಫಲಾನುಭವಿಗಳ ಖಾತೆಗೆ ಹಣ ಪಾವತಿಸುವ ಪ್ರಕ್ರಿಯೆಗೆ ಶಿವಮೊಗ್ಗದಲ್ಲೇ ಅಧಿಕೃತವಾಗಿ ಇಂದು ಚಾಲನೆ ನೀಡಲಾಗುತ್ತಿದ್ದು, ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ.
ನೋಂದಣಿ ಮಾಡುವುದು ಹೇಗೆ?
ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ (Aadhar Card), ಬ್ಯಾಂಕ್ ಪಾಸ್ಬುಕ್, ಎಸ್ಎಸ್ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್ (Karnataka One), ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್ನಲ್ಲಿ ಸಲ್ಲಿಸಬಹುದಾಗಿದೆ.
ಭವ್ಯಶ್ರೀ ಆರ್ ಜೆ